ತುಮಕೂರು :

      ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣಾ ಬಹಿರಂಗ ಪ್ರಚಾರವನ್ನು ನಿಯಂತ್ರಿಸಲು, ಚುನಾವಣೆಯನ್ನು ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಸೆಂಬರ್ 7ರ ಸಂಜೆ 4 ರಿಂದ ಡಿ.10ರ ಸಂಜೆ 4 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್.ಪಾಟೀಲ ಆದೇಶ ಹೊರಡಿಸಿದ್ದಾರೆ.

      ನಿಷೇಧಾಜ್ಞೆಯ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಈ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದಾಗಲಿ ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ. ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡಬಾರದು. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವಂತಿಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು. ಸಾರ್ವಜನಿಕರ ಪ್ರಾಣ ಮತ್ತು ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸಬಾರದು. ನಿಷೇಧಾಜ್ಞೆ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ಚುನಾವಣಾ ಆಯೋಗದ ಸ್ಪಷ್ಟೀಕರಣದಂತೆ ಮತದಾನದ ಹಿಂದಿನ 72 ಗಂಟೆಯ ಅವಧಿಯಲ್ಲಿ ಅಭ್ಯರ್ಥಿಯು ಮನೆ-ಮನೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡುವುದಕ್ಕೆ ವಿನಾಯಿತಿ ನೀಡಲಾಗಿದೆ.

ಈ ನಿಷೇದಾಜ್ಞೆಯು ಡಿಸೆಂಬರ್ 10ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಿಗೆ ಮತದಾನ ಮಾಡಲು ಬರುವವರಿಗೆ ಅನ್ವಯಿಸುವುದಿಲ್ಲ. ನಿಷೇದಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ.

(Visited 67 times, 1 visits today)