ತುಮಕೂರು :

     ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ನ್ಯೂನ್ಯತೆಗಳಿರುವುದು ಕಂಡು ಬಂದರೆ ಸಂಬಂಧಿಸಿದ ಸ್ಕ್ಯಾನಿಂಗ್ ಸೆಂಟರ್ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

     ತಮ್ಮ ಕಛೇರಿಯಲ್ಲಿ ಸೋಮವಾರ ನಡೆದ ಪಿಸಿ/ಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ 2 ತಿಂಗಳಿಗೊಮ್ಮೆ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡುವ ಸ್ಕ್ಯಾನಿಂಗ್ ಸೆಂಟರ್‍ಗಳ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು.

     ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಮಹಿಮಾ ಮಾತನಾಡಿ, ಜಿಲ್ಲೆಯಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಎರಡು ಸ್ಕ್ಯಾನಿಂಗ್ ಸೆಂಟರ್‍ಗಳ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ವಿಚಾರಣೆ ಹಂತದಲ್ಲಿದೆ ಎಂದು ಮಾಹಿತಿ ನೀಡಿದರಲ್ಲದೆ, ಪ್ರತಿ 2 ತಿಂಗಳಿಗೊಮ್ಮೆ ಜರುಗುವ ಪಿಸಿ/ಪಿಎನ್‍ಡಿಟಿ ಸಮಿತಿ ಸಭೆಯಲ್ಲಿ ಸ್ಕ್ಯಾನಿಂಗ್ ಸೆಂಟರ್‍ಗಳ ನೋಂದಣಿ ಹಾಗೂ ಅವಧಿ ಮುಗಿದ ಸೆಂಟರ್‍ಗಳ ನವೀಕರಣ ಪ್ರಕ್ರಿಯೆ ನಡೆಸಲಾಗುವುದು. ಈಗಾಗಲೇ ನೋಂದಣಿಗಾಗಿ 2 ಹಾಗೂ ನವೀಕರಣಕ್ಕಾಗಿ 9 ಅರ್ಜಿಗಳು ಸ್ವೀಕೃತವಾಗಿವೆ. ಹೊಸದಾಗಿ ಸ್ಕ್ಯಾನಿಂಗ್ ಸೆಂಟರ್‍ಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಸ್ವೀಕರಿಸಲಾಗಿದ್ದು, ಸ್ವೀಕೃತಗೊಂಡ ಅರ್ಜಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

      ಸಭೆಯಲ್ಲಿ ವಕೀಲ ಕುಮಾರಸ್ವಾಮಿ, ವಕೀಲೆ ದೀಪ, ಸಮಿತಿ ಅಧ್ಯಕ್ಷ ಡಾ. ಶಿವರಾಜ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 7 times, 1 visits today)