ತುಮಕೂರು :

      ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಪೂರಕ ಔಷಧಿಗಳನ್ನೊಳಗೊಂಡ ಹೆಲ್ತ್ ಕಿಟ್ ಅನ್ನು ಅಗತ್ಯವಿರುವ ಸೋಂಕಿತರಿಗೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಈಗಾಗಲೇ ಮೊದಲ ಡೋಸ್ ಲಸಿಕೆ ನೀಡುವಲ್ಲಿ ಶೇ.100ರಷ್ಟು ಗುರಿ ಸಾಧಿಸಿದ್ದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಾಕಿ ಉಳಿಸಿಕೊಂಡಿರುವ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳನ್ನು ನೀಡಿ ಪೂರ್ಣಗೊಳಿಸಬೇಕು. ಲಸಿಕೆ ಪಡೆಯಲು ಹಿಂಜರಿಯುವ ಪ್ರದೇಶಗಳಲ್ಲಿ ಸೋಂಕಿನ ತೀವ್ರತೆಯನ್ನು ಹಾಗೂ ಲಸಿಕೆಯ ಅಗತ್ಯತೆ ಕುರಿತು ಮನವರಿಕೆ ಮಾಡಿ ಲಸಿಕೆ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯ ತುಮಕೂರು, ಶಿರಾ ಹಾಗೂ ಮಧುಗಿರಿ ತಾಲೂಕುಗಳಲ್ಲಿ 2000ಕ್ಕಿಂತಲೂ ಅಧಿಕ ಕೋವಿಡ್ ಸೋಂಕು ವರದಿಯಾಗಿದ್ದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಸೂಕ್ತ ಸಮಯದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸೋಂಕಿತರಿಗೆ ಹೆಲ್ತ್ ಕಿಟ್ ನೀಡಿರುವ ಬಗ್ಗೆ ವರದಿ ನೀಡಬೇಕು ಎಂದರಲ್ಲದೆ ಈ ಕುರಿತು ಬೋಗಸ್ ವರದಿ ನೀಡಿದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

      ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತೀ ಪ್ರಕರಣವನ್ನು ಜಾಗರೂಕತೆಯಿಂದ ವ್ಯವಸ್ಥಿತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸೂಚನೆ ನೀಡಿದರು.

      ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಕೋವಿಡ್ ಸಾವು ಹಾಗೂ ಸರ್ಕಾರದಿಂದ ನೀಡುವ ಪರಿಹಾರಕ್ಕೆ ಸಂಬಂಧಿಸಿದಂತೆ ನಿಯಮಗಳಡಿ ಸೋಂಕಿತರ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ ನಂತರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು 7 ದಿನಗಳ ನಂತರ ಬಿಡುಗಡೆಗೊಳಿಸಬೇಕು ಎಂದರು.

      ಜಿಲ್ಲೆಯಲ್ಲಿ ಪಹಣಿ ಕಲಂ 3/9 ಮಿಸ್ ಮ್ಯಾಚ್, ಪೈಕಿ ಪಹಣಿ ಒಗ್ಗೂಡಿಸುವಿಕೆ ಹಾಗೂ ಭೂಮಿ ಪೆಂಡೆನ್ಸಿ ಸೇರಿದಂತೆ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 14,000 ಪ್ರಕರಣಗಳು ಬಾಕಿಯಿದ್ದು, 15 ದಿನಗಳೊಳಗೆ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್ ಸೇರಿದಂತೆ ಎಲ್ಲಾ ತಾಲೂಕುಗಳ ತಹಸೀಲ್ದಾರ್‍ಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 8 times, 1 visits today)