ತುಮಕೂರು:

      ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ವಿಳಂಬ ಮಾಡಿ ಕರ್ತವ್ಯ ನಿರ್ಲಕ್ಷತೆ ತೋರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ವಿವಿಧ ಇಲಾಖೆಗಳ ಅಭಿವೃದ್ಧಿಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಯಾವುದೇ ಗ್ರಾಮದಿಂದ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಕೊಳವೆ ಬಾವಿ ಕೊರೆಯುವುದು, ಪಂಪ್‍ಸೆಟ್/ಮೋಟಾರ್ ಅಳವಡಿಕೆ, ವಿದ್ಯುತ್ ಸಂಪರ್ಕ ಕಲ್ಪಿಸುವುದು, ಕೊಳವೆಬಾರಿ ದುರಸ್ತಿ, ಮತ್ತಿತರ ಕುಡಿಯುವ ನೀರಿನ ಕಾಮಗಾರಿಗಳನ್ನು ಯಾವುದೇ ಕ್ರಿಯಾ ಯೋಜನೆ, ಮೇಲಧಿಕಾರಿಗಳ ಅನುಮತಿಗೆ ಕಾಯದೇ ತಕ್ಷಣವೇ ಕೈಗೊಂಡು ಪರಿಹಾರ ಒದಗಿಸಬೇಕು ಎಂದರಲ್ಲದೆ ಚುನಾವಣೆ ಮತ್ತಿತರ ಕಾರಣಗಳಿಂದ ಸ್ಥಗಿತಗೊಂಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

      ಜಿಲ್ಲೆಯ ಪಾವಗಡ, ಕೊರಟಗೆರೆ, ತುಮಕೂರು, ಮಧುಗಿರಿ, ಶಿರಾ ತಾಲೂಕುಗಳಲ್ಲಿ ಮಾತ್ರ ಕೊಳವೆ ಬಾವಿಗಳನ್ನು ಕೊರೆಯಲು ಆದ್ಯತೆ ನೀಡಲಾಗುತ್ತಿದ್ದು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ತಿಪಟೂರು ತಾಲೂಕುಗಳಿಗೆ ಆದ್ಯತೆ ನೀಡುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ. ಮಾಧುಸ್ವಾಮಿ ಹಾಗೂ ತಿಪಟೂರು ಶಾಸಕ ಬಿ.ಸಿ. ನಾಗೇಶ್, ತುರುವೇಕೆರೆ ಶಾಸಕ ಎ.ಎಸ್. ಜಯರಾಂ ಜಂಟಿಯಾಗಿ ಒತ್ತಾಯಿಸಿದಾಗ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ಬೇಧ-ಭಾವ ತೋರದೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಗೂ ಒಂದೇ ರೀತಿ ಆದ್ಯತೆ ನೀಡಬೇಕು ಎಂದು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಇಫ್ತಿಕಾರ್ ಅಹಮದ್ ಅವರಿಗೆ ನಿರ್ದೇಶನ ನೀಡಿದರು.

      ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಮಾಂಕಾಳಪ್ಪ ಮಾತನಾಡಿ 2018-19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬಸವ/ಅಂಬೇಡ್ಕರ್/ಪ್ರಧಾನಮಂತ್ರಿ ಆವಾಜ್/ದೇವರಾಜ್ ಅರಸ್ ವಸತಿ ಯೋಜನೆಯಡಿ 17450 ವಸತಿಗಳ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಗುರಿ ಹೊಂದಲಾಗಿತ್ತು. ಈ ಪೈಕಿ 14464 ವಸತಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಶೇ. 82ರಷ್ಟು ಸಾಧನೆ ಮಾಡಲಾಗಿದೆ. ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಲು 543 ಕೋಟಿ ರೂ.ಗಳ ಅನುದಾನ ಅಗತ್ಯವಿರುವ ಬಗ್ಗೆ ಸರ್ಕಾರಕ್ಕೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದಾಗ ಡಾ|| ಪರಮೇಶ್ವರ್ ಅವರು ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

      ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ(ಅಭಿವೃದ್ಧಿ) ಬಿ. ಕೃಷ್ಣಪ್ಪ ಮಾತನಾಡಿ ನರೇಗಾ ಯೋಜನೆಯಡಿ 2019-20ನೇ ಸಾಲಿಗಾಗಿ 75ಲಕ್ಷ ಮಾನವ ದಿನಗಳನ್ನು ಸೃಜಿಸಲು ಗುರಿಯಿದ್ದು, ಕೇವಲ ಎರಡೇ ತಿಂಗಳಲ್ಲಿ 9,10,000 ಮಾನವ ದಿನಗಳನ್ನು ಸೃಜಿಸಲಾಗಿದೆ. ಕಳೆದ ವರ್ಷ ನಿಗಧಿಯಾಗಿದ್ದ 50ಲಕ್ಷ ಮಾನವ ದಿನಗಳಿಗೆ 51ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಸಭೆಗೆ ವಿವರಿಸಿದರು.

       ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದ ಪರಮೇಶ್ವರ್ ಅವರು ನರೇಗಾ ಯೋಜನೆಯ ಕಾಮಗಾರಿಗಳನ್ನು ಮಾರ್ಗಸೂಚಿಯನ್ವಯ ಕೂಲಿ ಹಾಗೂ ಸಾಮಗ್ರಿಗಳನ್ನು 60ಃ40 ಅನುಪಾತದಲ್ಲಿ ಕೈಗೊಳ್ಳಬೇಕು. ಕಾಮಗಾರಿ ಕೈಗೊಳ್ಳುವಾಗ ಅನುಪಾತದಲ್ಲಿ ವ್ಯತ್ಯಾಸವಾಗಿದೆ ಎಂದು ಶಾಸಕರಿಂದ ದೂರುಗಳು ಕೇಳಿ ಬರುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ನರೇಗಾ ಯೋಜನೆಯ ಅನುದಾನವನ್ನು ಯಂತ್ರಗಳಿಗೆ ಬಳಸದೆ ಕಡ್ಡಾಯವಾಗಿ ಬಡ ಜನರಿಗೆ ಉದ್ಯೋಗ ಒದಗಿಸುವಲ್ಲಿ ವಿನಿಯೋಗಿಸಬೇಕೆಂದು ತಾಕೀತು ಮಾಡಿದರು.

      ಶಾಸಕ ಮಾಧುಸ್ವಾಮಿ ಮಾತನಾಡಿ ಪಶುಭಾಗ್ಯ ಯೋಜನೆಯಡಿ ಕಳೆದ ಸಾಲಿನಲ್ಲಿ ಆಯ್ಕೆಯಾಗಿರುವ 1206 ಫಲಾನುಭವಿಗಳಿಗೆ ಸಹಾಯಧನ ಈವರೆಗೂ ಪಾವತಿಯಾಗಿಲ್ಲದಿರುವ ಬಗ್ಗೆ ಸ್ಪಷ್ಟೀಕರಣ ಕೇಳಿದಾಗ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಪ್ರಕಾಶ್ ಮಾತನಾಡಿ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಸಹಾಯಧನವನ್ನು ಈಗಾಗಲೇ ಸಂಬಂಧಿಸಿದ ಸೇವಾ ಬ್ಯಾಂಕಿಗೆ ಜಮಾ ಮಾಡಲಾಗಿದೆ. ಬ್ಯಾಂಕಿನವರು ತಡ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

(Visited 17 times, 1 visits today)