ತುಮಕೂರು :

      ಕರ್ನಾಟಕ ಸರಕಾರ ಜಾರಿಗೆ ತಂದಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ,ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ವಂಶ ಸಂರಕ್ಷಣಾ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಹಾಗೂ ಬೆಂಬಲ ಬೆಲೆಯಲ್ಲಿ ಜಿಲ್ಲೆಯಲ್ಲಿ ರಾಗಿ,ಶೇಂಗಾ ಮತ್ತು ಸಿರಿಧಾನ್ಯಗಳ ಖರೀದಿ ಆರಂಭಿಸಬೇಕೆಂದು ಆಗ್ರಹಿಸಿ ಮಾರ್ಚ್ 21 ರಂದು ಬೃಹತ್ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ.
ನಗರದ ವಿಜ್ಞಾನ ಕೇಂದ್ರದಲ್ಲಿ ರೈತ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ಚಲೋ ಪೂರ್ವ ಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ರೈತರ ನಿರಂತರ ಹೋರಾಟಕ್ಕೆ ಮಣಿದು ಕೇಂದ್ರ ಸರಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ರಾಜ್ಯ ಸರಕಾರ ಜಾರಿಗೆ ತಂದಿರುವ ಜನವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಲು ಇನ್ನೂ ಮೀನಾಮೇಷ ಎಣಿಸುತ್ತಿದೆ.ಇದರ ವಿರುದ್ದ ಸಾವಿರಾರು ರೈತರು ಮಾರ್ಚ್ 21 ರಂದು ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ರಾಜ್ಯ ಸರಕಾರ ಜಾರಿಗೆ ತಂದಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಉಳುವವನೇ ಭೂಮಿಯ ಒಡೆಯ ಬದಲಾಗಿ, ಉಳ್ಳವನೇ ಭೂಮಿಯ ಮಾಲೀಕನಾಗುವ ಅವಕಾಶವನ್ನು ಸರಕಾರ ಕಲ್ಪಿಸಿದೆ.ಇದರಿಂದ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.ಇದರಿಂದ ಆಹಾರ ಧಾನ್ಯಗಳ ಕೊರತೆ ಎದುರಾಗಲಿದೆ. ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ಬಾಣಲೆಯಿಂದ ಬೆಂಕಿಗೆ ಬಿದ್ದಂತಹ ಪರಿಸ್ಥಿತಿ ರೈತರಿಗಾಗಲಿದೆ.ತಾವು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗದೆ ರೈತರು ಮತ್ತಷ್ಟು ಹತಾಸೆಗೆ ಒಳಗಾಗಬೇಕಾಗುತ್ತದೆ.ಗೋ ವಂಶ ಸಂರಕ್ಷಣಾ ತಿದ್ದುಪಡಿ ಕಾಯ್ದೆಯಿಂದ ಅನುಪಯುಕ್ತ ಗೋವುಗಳ ವಿಲೇವಾರಿ ಕಷ್ಟವಾಗಿದೆ.ಅಲ್ಲದೆ ಕೃಷಿ ಕಾರ್ಯಗಳಿಗೆ ಗೋವುಗಳನ್ನು ಖರೀದಿ ತರುವಾಗಲು ಸಾಕಷ್ಟು ಪ್ರತಿರೋಧಿ ಎದುರುಸುತ್ತಿದ್ದು,ಗೋರಕ್ಷಕರು ಮತ್ತು ರೈತರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ಹಾಗಾಗಿ ಈ ಮೂರು ಕ
ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂಬುದು ರೈತರ ಆಗ್ರಹವಾಗಿದೆ ಎಂದರು.
ತುಮಕೂರು ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಶೇಂಗಾ, ಆಹಾರ ಬೆಳೆಗಳಾದ ರಾಗಿ ಮತ್ತು ಸಿರಿಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಅವಕಾಶ ಇಲ್ಲದಂತಾಗಿದೆ.ಸರಕಾರ ಬೆಂಬಲ ಬೆಲೆಯಲ್ಲಿ ಕೊಳ್ಳುವ ನಾಟಕ ಮಾಡಿ, ರೈತರನ್ನು ಹಾದಿ ತಪ್ಪಿಸಿದೆ. ಶೇ80ರಷ್ಟು ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಾಗಿಲ್ಲ.ಹಾಗಾಗಿ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ತಂದು ಮತ್ತೊಮ್ಮೆ ಬೆಂಬಲ ಬೆಲೆಯಲ್ಲಿ ರಾಗಿ, ಶೇಂಗಾ ಮತ್ತು ಸಿರಿಧಾನ್ಯಗಳ ಖರೀದಿಗೆ ಅವಕಾಶ ಕಲ್ಪಿಸಬೇಕೆಂಬುದು ನಮ್ಮ ಒತ್ತಾಯವಾಗಿದೆ.
ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು ಮಾರ್ಚ್ 21 ರಂದು ಬೃಹತ್ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಒಂದು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ.ಅಲ್ಲದೆ ಮಾರ್ಚ್ 22 ಮತ್ತು 23 ರಂದು ಪರ್ಯಾಯ ಜನಾಧಿವೇಶನವನ್ನು ಆಯೋಜಿಸುತ್ತಿದ್ದು,ಮೇಲಿನ ಎಲ್ಲಾ ಬೇಡಿಕೆಗಳ ಕುರಿತು ಚರ್ಚೆ ನಡೆಸಿ, ನಿರ್ಣಯ ಕೈಗೊಂಡು ಸರಕಾರಕ್ಕೆ ಕಳುಹಿಸಲಾಗುವುದು ಎಂದು ಎ.ಗೋವಿಂದರಾಜು ತಿಳಿಸಿದರು.ಸಭೆಯಲ್ಲಿ ಮುಖಂಡರಾದ ಶಂಕರಪ್ಪ, ಲಕ್ಷ್ಮಣಗೌಡ, ರಂಗಹನುಮಯ್ಯ, ರವೀಶ್ ಸೇರಿದಂತೆ ಜಿಲ್ಲೆಯ ರೈತ ಮುಖಂಡರು ಪಾಲ್ಗೊಂಡಿದ್ದರು.

(Visited 8 times, 1 visits today)