ತುಮಕೂರು:

ಸಾರ್ವಕರ್ ಅಧ್ಯಯನ ಪೀಠ ಸ್ಥಾಪನೆ ವಿರೋಧಿಸಿ ಎಸ್.ಎಫ್.ಐ ಮತ್ತು ಪ್ರಗತಿಪರ ಸಂಘಟನೆಗಳು ಪ್ರತಿಭಟಿಸುತ್ತಿರುವುದನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಮತ್ತು ವಿವಿಯಲ್ಲಿ ವಿದ್ಯಾರ್ಥಿ ವಿರೋಧಿಯಾದ ಯಾವುದೇ ನಿಲುವುಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ.
ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ವಿರೋಧಿಸಿ ಎಸ್.ಎಫ್.ಐ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಕುಲಪತಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ವಿವಿಯಲ್ಲಿ ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಬಾರದು. ಮಾಡಿದರೆ ಜಿಲ್ಲೆಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಲಾಗುವುದು ಎಂಬುದನ್ನು ಕುಲಪತಿಗಳ ಗಮನಕ್ಕೆ ತರಲಾಯಿತು. ಈ ಹಿನ್ನೆಲೆಯಲ್ಲಿ ಕುಲಪತಿಗಳು ವಿದ್ಯಾರ್ಥಿ ವಿರೋಧಿ ಪೀಠಗಳನ್ನು ವಿವಿಯಲ್ಲಿ ಜಾರಿಗೊಳಿಸುವುದಿಲ್ಲ ಎಂದು ಭರವಸೆ ನೀಡಿದರು.
ಭಾರತೀಯ ಶರಣ ಸೇನಾ ಜಿಲ್ಲಾಧ್ಯಕ್ಷ ರವಿಕುಮಾರ ರಾಯಸಂದ್ರ ಮಾತನಾಡಿ, ವಿವಿಯು ಸಾವರ್ಕರ್ ಅಧ್ಯಯನ ಪೀಠದಿಂದ ಹಿಂದೆ ಸರಿಯದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು. ವಿಶ್ವವಿದ್ಯಾಲಯದಲ್ಲಿ ಯಾವುದೇ ಕಾರಣಕ್ಕೂ ವಿಷಬೀಜ ಬಿತ್ತಲು ಬಿಡುವುದಿಲ್ಲ. ಜಾತ್ಯತೀತ ಮೌಲ್ಯಗಳಿಗಾಗಿ ವಿವಿಯು ಹೆಚ್ಚು ಗಮನಹರಿಸಬೇಕಾಗಿದೆ. ಹಾಲಿ ಇರುವ ಸಿಂಡಿಕೇಟ್ ಸದಸ್ಯರು ವಿವಿಯ ಕ್ಯಾಂಪಸ್ ನಿರ್ಮಾಣಕ್ಕಾಗಿ ಮತ್ತು ಇರುವ ಅಧ್ಯಯನ ಪೀಠಗಳ ಅಭಿವೃದ್ಧಿ ಹೆಚ್ಚು ಗಮನಹರಿಸಬೇಕಾಗಿದೆ. ಅನಗತ್ಯವಾಗಿ ವಿದ್ಯಾರ್ಥಿಗಳಿಗೆ ಅಗತ್ಯವಿಲ್ಲದ ವಿಚಾರಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟ ಶಂಕರ್ ಮಾತನಾಡಿ, ಕುಲಪತಿಗಳು ಸಾವರ್ಕರ್ ಪೀಠಕ್ಕೆ ಯಾವುದೇ ಕಾರಣಕ್ಕೂ ಮುಂದಾಗಬಾರದು. ಒಂದು ವೇಳೆ ಜಾರಿಯಾದರೆ ನಾಲ್ಕು ವರ್ಷಗಳ ಕಾಲ ನಿರಂತರ ಹೋರಾಟಗಳು ಮುಂದುವರಿಯಲಿವೆ ಎಂದು ಎಚ್ಚರಿಕೆ ನೀಡಿದರು.

(Visited 3 times, 1 visits today)