ಕೊರೋನಾ ವೈರಸ್ ಸೋಂಕು ಪರೀಕ್ಷೆಯಲ್ಲಿ ಜಿಲ್ಲೆಯ ಎಲ್ಲಾ 12 ಮಾದರಿಗಳು ನೆಗೆಟಿವ್!

ತುಮಕೂರು :

       ತುಮಕೂರು ಜಿಲ್ಲೆಗೆ ವಿವಿಧ ದೇಶಗಳಿಂದ ಬಂದಿರುವಂತಹ 256 ಜನರನ್ನು ಕೊರೊನಾ ತಪಾಸಣೆಗೊಳಪಡಿಸಿ, ಅವರೆಲ್ಲರೂ ತೀವ್ರ ನಿಗಾವಣೆಯಲ್ಲಿ ವೈದ್ಯರ ಸಂಪರ್ಕದಲ್ಲಿದ್ದಾರೆ. 12 ಗಂಟಲು ಸ್ರಾವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಎಲ್ಲವೂ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ತಿಳಿಸಿದರು.

      ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕರೆಯಲಾಗಿದ್ದ ಕೊರೊನಾ ಸೋಂಕು ತಡೆಯುವ ಮುಂಜಾಗ್ರತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಒಟ್ಟಾರೆ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿರುವುದಿಲ್ಲ.

      ಸಾರ್ವಜನಿಕರು ಯಾವುದೇ ಕಾರಣಕ್ಕೆ ಭಯಪಡದೆ ಮುನ್ನೆಚ್ಚರಿಕೆ ಕ್ರಮವಾಗಿ ಜನರಿಂದ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವುದು, ಜ್ವರ, ಕೆಮ್ಮು, ನೆಗಡಿ ಪೀಡಿತರು ಹತ್ತಿರದ ಆಸ್ಪತ್ರೆಗಳಲ್ಲಿ ತಪಾಸಣೆಗೊಳಪಡಬೇಕು. ಯಾವುದೇ ಸಭೆ ಸಮಾರಂಭಗಳು, ಮದುವೆ, ಇನ್ನಿತರೆ ಜನಸಂದಣಿ ಕಾರ್ಯಕ್ರಮಗಳು ನಡೆಯಬಾರದೆಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸದೆ ಇರುವುದರಿಂದ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದರು.

      ಭಾನುವಾರ(ಮಾ.22)ದಂದು ಭಾರತ ದೇಶದ ಪ್ರಧಾನ ಮಂತ್ರಿಗಳು ಕರೆ ನೀಡಿರುವಂತೆ ಜಿಲ್ಲೆಯಾದ್ಯಂತ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಜನತಾ ಕಪ್ರ್ಯೂ ಜಾರಿಯಲ್ಲಿರುತ್ತದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್, ಸಾರಿಗೆ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿ, ಹೋಟೆಲ್, ಮತ್ತಿತರ ವಾಣಿಜ್ಯ ಚಟುವಟಿಕೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಿ ಈ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

      ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿರುವ ಬಿಸಿಎಂ ಸೇರಿದಂತೆ ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿ 561ಕ್ಕೂ ಹೆಚ್ಚು ಕೊಠಡಿಗಳನ್ನು ಮೀಸಲಿರಿಸಲಾಗಿದೆ, ಮನೆಗಳಲ್ಲೇ ತೀವ್ರ ನಿಗಾ ವ್ಯವಸ್ಥೆಯಲ್ಲಿರುವವರಿಗೆ ಇಂದಿನಿಂದ ಗುರುತಿನ ಸ್ಟಾಂಪ್ ಹಾಕಲಾಗುತ್ತಿದೆ ಎಂದರು.

      ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ-2 ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಿಕಾ, ಜಿಲ್ಲಾ ಸರ್ಜನ್ ಡಾ|| ವೀರಭದ್ರಯ್ಯ, ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ನೊಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 13 times, 1 visits today)

Related posts