ತುಮಕೂರು :

ಅಲೆಮಾರಿ, ಅರೆ ಅಲೆಮಾರಿಗಳಿಗೆ ನಿವೇಶನ ನೀಡುವುದು ಸೇರಿದಂತೆ ಅವರ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಎಲ್ಲಾ ತಹಶೀಲ್ದಾರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಅಲೆಮಾರಿ, ಅರೆ ಅಲೆಮಾರಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಜಿಲ್ಲೆಯಲ್ಲಿ ನಿವೇಶನ ರಹಿತ ಅಲೆಮಾರಿ/ಅರೆ ಅಲೆಮಾರಿಗಳಿಗೆ ನಿವೇಶನ ನೀಡುವುದು ಸೇರಿದಂತೆ ಅವರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಮಧುಗಿರಿ ಹಾಗೂ ಕೊರಟಗೆರೆ ತಾಲ್ಲೂಕುಗಳಲ್ಲಿ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರು ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ವರದಿಯಾಗಿದ್ದು, ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಳೆದ ಶುಕ್ರವಾರ ಪರಿಶಿಷ್ಟರ ಅನುದಾನ ಬಳಕೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಹಾಗೂ ಪರಿಶೀಲನಾ ಸಭೆಗೆ ಹಾಜರಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಮಗ್ರ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ(IPಉಖS)ಯಡಿ 86 ಪ್ರಕರಣಗಳು ಬಾಕಿಯಿದ್ದು ಶೀಘ್ರ ಇತ್ಯರ್ಥಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಕಂದಾಯ ಇಲಾಖೆಯ ಬಹುತೇಕ ಸಮಸ್ಯೆಗಳನ್ನು ತಾಲ್ಲೂಕು ಹಂತದಲ್ಲೇ ಬಗೆಹರಿಸಬೇಕು ಎಂದು ತಿಳಿಸಿದರು.

ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಎರಡನೇ ಡೋಸ್ ಶೇ. 96ರಷ್ಟು ಪೂರ್ಣಗೊಂಡಿದ್ದು, 15-17 ವಯಸ್ಸಿನ ಮಕ್ಕಳಿಗೆ ಮೊದಲ ಡೋಸ್ ಶೇ.76 ಹಾಗೂ ಎರಡನೇ ಡೋಸ್ ಶೇ.63 ರಷ್ಟು ಲಸಿಕೆ ನೀಡಲಾಗಿದೆ ಎಂದರಲ್ಲದೆ 12-14 ವಯಸ್ಸಿನ ಮಕ್ಕಳಿಗೆ 27ರಷ್ಟು ಕೊರ್ಬಿವ್ಯಾಕ್ಸ್ ಲಸಿಕಾಕರಣ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಮಕ್ಕಳ ಲಸಿಕಾಕರಣವನ್ನು ಏಪ್ರಿಲ್ 10ರೊಳಗಾಗಿ ಮುಗಿಸಬೇಕು ಎಂದು ಆರೋಗ್ಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ ವಿದ್ಯಾಕುಮಾರಿ ಮಾತನಾಡಿ ಮಧುಗಿರಿ ತಾಲ್ಲೂಕಿನ ಬ್ಯಾಲ್ಯ ಗ್ರಾಮದಲ್ಲಿ ಅಲೆಮಾರಿ/ ಅರೆ ಅಲೆಮಾರಿಗಳಿಗೆ ಮೀಸಲಿಟ್ಟಿರೋ ಜಾಗದಲ್ಲಿ ಒತ್ತುವರಿ ಮಾಡಿರುವುದು ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಒತ್ತುವರಿ ತೆರವುಗೊಳಿಸಿ ವರದಿ ನಿಡಬೇಕೆಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ ಕೋವಿಡ್ ಮೃತರ ಕುಟುಂಬಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ನೀಡುತ್ತಿದೆ. ಜಿಲ್ಲೆಯಲ್ಲಿ ಈವರೆಗೂ 1244 ಅರ್ಜಿಗಳು ಸ್ವೀಕೃತವಾಗಿದ್ದು, 1123 ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರಲ್ಲದೆ, ಪೈಕಿ ಪಹಣಿ ಒಟ್ಟುಗೂಡಿಸುವಿಕೆ, ಪಹಣಿ ಕಾಲಂ 3/9 ಮಿಸ್ ಮ್ಯಾಚ್, ಭೂಮಿ ಪೆಂಡೆನ್ಸಿ, ಸಾಮಾಜಿಕ ಭದ್ರತಾ ಯೋಜನೆ, ನಾಡ ಕಚೇರಿ, ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ನಾಗೇಂದ್ರಪ್ಪ, ಆರ್‍ಸಿಎಚ್ ಅಧಿಕಾರಿ ಡಾ: ಕೇಶವ್ ರಾಜ್, ಡಾ: ಮೋಹನ್ ದಾಸ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 8 times, 1 visits today)