ತುಮಕೂರು:

      ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ವಿದ್ಯಾರ್ಥಿ ನಿಲಯಗಳಲ್ಲಿ ಶುಚಿತ್ವ ಕಾಪಾಡಬೇಕು ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.

      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಕಲ್ಯಾಣ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡುವುದರೊಂದಿಗೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಶುದ್ಧ ಕುಡಿಯುವ ನೀರು, ಆಟೋಟಗಳ ಬಗ್ಗೆ ಆದ್ಯತೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

      ಸಮಾಜ ಕಲ್ಯಾಣ ಇಲಾಖೆ ಮತ್ತು ಇನ್ನುಳಿದ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ವೇತನ ಪಾವತಿಯಾಗಿರುವ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ಕೈಗೊಂಡ ಅವರು ಇಲಾಖೆಗಳಲ್ಲಿ ಮಂಜೂರಾದ ಹುದ್ದೆಗಳಿಗೆ ತಪ್ಪದೇ ನಿಗಧಿತ ಅವಧಿಯೊಳಗೆ ವೇತನವನ್ನು ಪಾವತಿಸಬೇಕು. ಮಂಜೂರಾದ ಹುದ್ದೆಗಳಿಗೆ ಹೆಚ್ಚುವರಿಯಾಗಿ ನೇಮಕ ಮಾಡಿಕೊಂಡಿದ್ದಲ್ಲಿ ವಿವರಗಳನ್ನು ಜಿಲ್ಲಾ ಪಂಚಾಯಿತಿಗೆ ಅನುಮೋದನೆಗಾಗಿ ಸಲ್ಲಿಸಬೇಕು. ಲಿಂಕ್ ಡಾಕ್ಯುಮೆಂಟ್‍ಗಿಂತ ಹೆಚ್ಚುವರಿಯಾಗಿ ಭರಿಸುವ ಮೊತ್ತದ ವಿವರಗಳನ್ನು ಜಿಲ್ಲಾ ಪಂಚಾಯತ್ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಹೆಚ್ಚುವರಿ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿ ಸಂಬಂಧ ಸರ್ಕಾರದ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದು ನೇಮಕ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಆಧಾರದ ನೌಕರರಿಗೆ ಹಿಂದಿನ ಸಾಲುಗಳಲ್ಲಿ ವೇತನ ಪಾವತಿಯಾಗದಿದ್ದಲ್ಲಿ ನಿಯಮಾನುಸಾರ (ಕಾರ್ಮಿಕ ಇಲಾಖೆ Labour Act) ಸೂಕ್ತ ಕ್ರಮವಹಿಸಬೇಕು. ಹೊರಗುತ್ತಿಗೆ ಏಜೆನ್ಸಿಯವರು ಕಡ್ಡಾಯವಾಗಿ ವೇತನ ಪಾವತಿ ಮಾಡಿದ ನಂತರ ಇ.ಪಿ.ಎಫ್. ಮತ್ತು ಇ.ಎಸ್.ಐ.ಗಳನ್ನು ಪಾವತಿಸಿರುವ ಬಗ್ಗೆ ತಪ್ಪದೇ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

(Visited 19 times, 1 visits today)