ತುಮಕೂರು:

      ತುಮಕೂರು ಜಿಲ್ಲೆಯಲ್ಲಿ ಕೋವಿಡ್-19ರ ಸೋಂಕಿನಿಂದ ಮರಣ ಉಂಟಾಗದಂತೆ ಎಚ್ಚರವಹಿಸಿ ಉತ್ತಮವಾಗಿ ಚಿಕಿತ್ಸೆ ನೀಡಲು ಕ್ರಮ ವಹಿಸುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಸೂಚನೆ ನೀಡಿದ್ದಾರೆ.

      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಇಲ್ಲಿಯವರೆಗೂ ಮೂರು ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ನೆಲಮಂಗಲ ತಾಲ್ಲೂಕಿನ ಪಿ-1686 55ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ಭಾನುವಾರ ವರದಿಯಾಗಿದೆ ಎಂದರು.

      ತುಮಕೂರು ಜಿಲ್ಲೆಯಲ್ಲಿ ಕೋವಿಡ್-19ರ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ ಸಚಿವರು, ಕೊರೋನಾ ಸೋಂಕಿತರಿಗೆ ಉತ್ತಮವಾದ ಚಿಕಿತ್ಸೆಯನ್ನು ನೀಡಿ ಸಾವು ಪ್ರಕರಣಗಳು ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

      ಹೇಮಾವತಿ ಹಾಗೂ ಎತ್ತಿನ ಹೊಳೆ ಯೋಜನೆಯ ಅನುಷ್ಠಾನ/ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

      ಸಭೆಯಲ್ಲಿ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೆ. ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

(Visited 4 times, 1 visits today)