ತುಮಕೂರು:


ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಮಾಯಸಂದ್ರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಗ್ರಾಮ ವಾಸ್ತವ್ಯದ ಸವಿ ನೆನಪಿಗಾಗಿ ಮಾಯಸಂದ್ರ ಗ್ರಾಮದ ಅಭಿವೃದ್ಧಿ ಕೆಲಸಕ್ಕೆ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವರಾದ ಆರ್. ಆಶೋಕ್ ಅವರು ಇಂದಿಲ್ಲಿ ಘೋಷಿಸಿದರು.
ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಡೆಯಲಿರುವ ಗ್ರಾಮ ಸಭೆಯಲ್ಲಿ ಒಂದು ಕೋಟಿ ರೂ.ಗಳನ್ನು ಯಾವ ಕಾಮಗಾರಿಗೆ ಬಳಸಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸಲಾಗುವುದು ಎಂದರು.
ರಾಜ್ಯದ ಜನತೆ ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ ಮುಂತಾದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಕಚೇರಿಗೆ ಅಲೆಡಾಡಬೇಕಿತ್ತು. ಗ್ರಾಮಸ್ಥರ ಈ ಅಲೆದಾಟವನ್ನು ತಪ್ಪಿಸಲೆಂದೇ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮದ ಮನೆ ಬಾಗಿಲಿಗೆ ಕರೆತರುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಕಂದಾಯ ಇಲಾಖೆಯಲ್ಲಿ ಇದೊಂದು ಕ್ರಾಂತಿಕಾರಕ ಪರಿವರ್ತನೆ ತರಲಾಗಿದೆ. ಇದಲ್ಲದೆ ಜಿಲ್ಲಾಧಿಕಾರಿಗಳು ಪ್ರತಿ ಮಂಗಳವಾರ ಒಂದು ತಾಲ್ಲೂಕಿಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಲಿದ್ದಾರೆ ಎಂದರು.

ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಪ್ರತಿ ತಿಂಗಳು ಅವರಿಗೆ ಹತ್ತು ಸಾವಿರ ರೂಪಾಯಿ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಇದಲ್ಲದೆ ಆಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರಿಗೆ ಆಶ್ರಯ ಯೋಜನೆಯಡಿ ನಿವೇಶನ ಮತ್ತು ಮನೆ ನಿರ್ಮಿಸಿ ಕೊಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಕಂದಾಯ ದಾಖಲೆಗಳನ್ನು ಪಡೆಯಲು ದಿನಗಟ್ಟಲೇ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದಕ್ಕಾಗಿ ಆರ್‍ಟಿಸಿ, ಅಟ್ಲಾಸ್, ಜಾತಿ ಮತ್ತು ಆದಾಯ ದೃಢೀಕರಣ ಪತ್ರಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲಾಗಿದ್ದು, ಈವರೆಗೆ 50 ಲಕ್ಷ ಕುಟುಂಬಗಳ ಸುಮಾರು 4 ಕೋಟಿಗೂ ಅಧಿಕ ಕಂದಾಯ ದಾಖಲೆಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಯಾವುದೇ ಭಯವಿಲ್ಲದೆ ಗ್ರಾಮಸ್ಥರು ಇನ್ನು ಮುಂದೆ ಜಿಲ್ಲಾಧಿಕಾರಿ ನಡೆ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳಿಗೆ ಸಲ್ಲಿಸಬಹುದು. ತಹಶೀಲ್ದಾರ್, ಆರ್‍ಐ, ಭೂ ಮಾಪಕರು ಸೇರಿದಂತೆ ಯಾರೇ ಅಧಿಕಾರಿ ತಪ್ಪು ಮಾಡಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬಹುದು ಎಂದರು. ಇಂದಿನ ಒಂದು ಗ್ರಾಮ ವಾಸ್ತವ್ಯದಿಂದ 5331 ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ನೀಡಲಾಗುತ್ತಿದೆ. ಇದುವರೆಗೂ ರಾಜ್ಯಾದ್ಯಂತ ಈ ಕಾರ್ಯಕ್ರಮದಡಿ ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 94362 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, ಬಾಕಿ 12613 ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ವರ್ಗಾಯಿಸಲಾಗಿದೆ ಎಂದರು.

(Visited 1 times, 1 visits today)