ತುಮಕೂರು:

      ಜಿಲ್ಲೆಯಲ್ಲಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರದಲ್ಲಿ ದುರಸ್ತಿಪಡಿಸಿ, ಜನರಿಗೆ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿರುವ ಬಗ್ಗೆ ದೂರುಗಳು ಜನರಿಂದ ಬಂದಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಮುಂದಿನ ದಿನಗಳಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.

      ಕುಡಿಯುವ ನೀರಿನ ಸಮಸ್ಯೆಗಳನ್ನು ಜಿಲ್ಲಾ ಪಂಚಾಯತ್ ಸದಸ್ಯರು ಅಧ್ಯಕ್ಷರ ಗಮನಕ್ಕೆ ತಂದರು. ಸಮಸ್ಯೆಯನ್ನು ಆಲಿಸಿದ ಅಧ್ಯಕ್ಷರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಕೆಟ್ಟು ಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿಗೊಳಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಪಾವಗಡ, ಮಧುಗಿರಿ, ಶಿರಾ ತಾಲ್ಲೂಕುಗಳಲ್ಲಿ ಪ್ಲೋರೈಡ್ ಅಂಶ ಹೆಚ್ಚಾಗಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವೇ ದುರಸ್ಥಿಗೊಳಿಸಿ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

      15ನೇ ಹಣಕಾಸು ಯೋಜನೆಯಡಿ ಜಿಲ್ಲಾ ಪಂಚಾಯಿತಿಗೆ 8.97 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಪೈಕಿ ಶೇ.50ರಷ್ಟು ಅನುದಾನವನ್ನು ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ರೈತರು ಹಾಗೂ ಗ್ರಾಮೀಣ ಜನರ ಜೀವನವನ್ನು ಮತ್ತಷ್ಟು ಸುಧಾರಿಸುವುದು ಸೇರಿದಂತೆ ವಿವಿಧ 27 ವಲಯಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಶೇ.50ರಷ್ಟು ಅನುದಾನವನ್ನು ಕುಡಿಯುವ ನೀರು ನೈರ್ಮಲ್ಯೀಕರಣ ಸೇವೆಗಳನ್ನು ಉತ್ತಮಗೊಳಿಸಲು ಬಳಕೆ ಮಾಡಬಹುದಾಗಿದೆ ಎಂದು ಮುಖ್ಯ ಯೋಜನಾಧಿಕಾರಿ ಬಸವನಗೌಡ ಅವರು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪಂಚಾಯತ್ ಸದಸ್ಯರು, ತಾಲ್ಲೂಕ್ ಮಟ್ಟದ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

(Visited 19 times, 1 visits today)